ಕೋಟ್ಪಾಕಾಯ್ದೆ ಜಾರಿಯಲ್ಲಿದ್ದರೂ ತಂಬಾಕು ಉತ್ಪನ್ನಗಳ ಸೇವನೆ ಹೆಚ್ಚಳ : ನ್ಯಾ. ಸಿ.ಎನ್ ಲೋಕೇಶ್ ಆತಂಕ

ಭದ್ರಾವತಿ: ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ವಕೀಲರ ಸಂಘ, ಅಭಿ ಯೋಜನೆ ಇಲಾಖೆ, ರೋಟರಿ ಕ್ಲಬ್ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜ್ ವತಿಯಿಂದ ಶುಕ್ರವಾರ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಗುಲಾಬಿ ಆಂದೋಲನ ಹಾಗೂ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ: ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ವಕೀಲರ ಸಂಘ, ಅಭಿ ಯೋಜನೆ ಇಲಾಖೆ, ರೋಟರಿ ಕ್ಲಬ್ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜ್ ವತಿಯಿಂದ ಶುಕ್ರವಾರ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಗುಲಾಬಿ ಆಂದೋಲನ ಹಾಗೂ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ, ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ.ಎನ್ ಲೋಕೇಶ್ ಕಾರ್ಯಕ್ರಮ ಉದ್ಘಾಟಿಸಿದರು.
ಕೋಟ್ಪಾಕಾಯ್ದೆ ಜಾರಿಯಲ್ಲಿದ್ದರೂ ಸಹ ತಂಬಾಕು ಉತ್ಪನ್ನಗಳ ಸೇವನೆ ಹೆಚ್ಚಾಗುತ್ತಿದ್ದು, ಇದರಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತಿವೆ. ಈ ಕುರಿತು ಜಾಗೃತಿ ಮೂಡಿಸುವಲ್ಲಿ ಈ ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಂಕರಪ್ಪ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಿ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ತಂಬಾಕಿನಲ್ಲಿ ೭೦೦೦ ವಿಷ ಪದಾರ್ಥಗಳು ಹಾಗೂ ೩೦೦೦ ಕ್ಯಾನ್ಸರ್ ಕಾರಕ ಪದಾರ್ಥಗಳು ಇದ್ದು, ತಂಬಾಕು ಸೇವನೆಯಿಂದ ಮುಕ್ತಿ ಹೊಂದಲು ಇಚ್ಚಿಸುವವರಿಗಾಗಿ ತಂಬಾಕು ವ್ಯಸನ ಮುಕ್ತ ಕೇಂದ್ರ ತೆರೆಯಲಾಗಿದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಪೊಲೀಸ್ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕೋಟ್ಪಾ ಕಾಯ್ದೆಯಡಿ ದಾಳಿಗಳನ್ನು ನಡೆಸುತ್ತಿದ್ದು, ಎಲ್ಲಾ ಅಂಗಡಿ ಮುಂಗ್ಗಟ್ಟುಗಳಿಗೆ ಭೇಟಿ ನೀಡಿ ಕೋಟ್ಪಾ ಕಾಯಿದೆ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಾ ಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿ, ಆಕರ್ಷಣೆ ಹಾಗೂ ವಿವಿಧ ಕಾರಣಗಳಿಂದ ಪ್ರಾರಂಭವಾದ ಚಟ ಕ್ಯಾನ್ಸರ್ ನಂತಹ ಕಾಯಿಲೆಗೆ ಕಾರಣವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ, ಉಮೇಶ್, ವಕೀಲರಾದ ಶ್ವೇತಾ, ನಾಗರಾಜ್, ವೈದ್ಯರಾದ ಡಾ. ಮಯೂರಿ, ರಶ್ಮಿ, ರೋಟರಿ ಕ್ಲಬ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಜ್ಯೋತಿ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ವರ್ಗದವರು, ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಆನಂದ ಮೂರ್ತಿ ಸ್ವಾಗತಿಸಿ, ಅಂಕಿತ ವಂದಿಸಿದರು.